ಕುಂದಾಪುರ: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಗತ್ಯ. ಆ ಮೂಲಕ ವಿದ್ಯಾರ್ಥಿದೆಸೆಯಲ್ಲಿಯೇ ಆತ್ಮ ಸ್ಥೈರ್ಯದಿಂದ ಕಾರ್ಯಪ್ರವೃತ್ತರಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಬಿ.ಎಸ್. ಸುರೇಶ್ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ.ಬಿ. ಬಿ. ಹೆಗ್ಗೆ ಪ್ರಥಮ ದರ್ಜೆ ಕಾಲೇಜಿನ 2020-21ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಮಾತನಾಡಿ ಶಿಸ್ತು, ಸಂಯಮ, ನಿಷ್ಠೆ, ಶ್ರದ್ಧೆ ಇವುಗಳು ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ಶಿವರಾಜ್ ಸಿ. ನಾವುಂದ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ ಪ್ರತಿಜ್ಞಾ ವಿಧಿ ಭೋದಿಸಿದರು. ವಿದ್ಯಾರ್ಥಿನಿ ಸುಪ್ರೀತಾ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ “Freshers’ Day” ಕಾರ್ಯಕ್ರಮದಲ್ಲಿ ಸಿ.ಎಸ್. ಫೌಂಡೇಶನ್ ತೇರ್ಗಡೆ ಹೊಂದಿದ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ದ್ವಿತೀಯ ಪಿ.ಯು.ಸಿಯಲ್ಲಿ ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.