ಕುಂದಾಪುರ(ಜು. 23): ವಿದ್ಯಾರ್ಥಿಗಳ ಬದುಕು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಬಾರದು, ಅದು ಅನುಭವ ಕೇಂದ್ರಿತವಾಗಿರಬೇಕು. ಆ ನಿಟ್ಟಿನಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ವಿವಿಧ ಅನುಭವಕೇಂದ್ರಿತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಪ್ರಶಂಸನೀಯ ಎಂದು ಕುಂದಾಪುರದ ಹಿರಿಯ ಪತ್ರಕರ್ತರಾದ ಜಾನ್ ಡಿ’ಸೋಜ ಹೇಳಿದರು.

ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಜೀವನ ಮೌಲ್ಯ’ ವಿಷಯದ ಕುರಿತು ಮಾತನಾಡಿದರು.ವಿದ್ಯಾರ್ಥಿಗಳು ಬದುಕಿನಲ್ಲಿ ಯಾವುದೇ ಕಾರಣಕ್ಕೂ ಧೃತಿಗೆಡಬಾರದು. ಸಾಧಿಸುವ ಛಲ, ಸಹಾನುಭೂತಿ, ನಾಗರಿಕ ಪ್ರಜ್ಞೆ ತಮ್ಮಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ಅತ್ಯುತ್ತಮ ವಿದ್ಯಾರ್ಥಿಯಾಗಿ ಸಮಾಜಮುಖಿ ಚಟುವಟಿಕೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಕಾರ್ಯಕ್ರಮ ಸಂಯೋಜಕ ಹಾಗೂ ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ರಜತ್ ಬಂಗೇರ, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕಿ ಹಾಗೂ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಮಾಲತಿ ಕುಂದರ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.










