ಕುಂದಾಪುರ(ಮಾ.15): ಭಾರತ ಕರ್ಮಭೂಮಿ, ಈ ದೇಶದಲ್ಲಿ ಜನಿಸಿರುವುದೇ ನಮ್ಮೆಲ್ಲರ ಸೌಭಾಗ್ಯ. ಭಾರತದಂತಹ ದೇಶದಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಎನ್.ಎಸ್.ಎಸ್. ಪ್ರಮುಖ ಪಾತ್ರವಹಿಸುತ್ತಿದೆ. ವಿದ್ಯಾರ್ಥಿಗಳು ಎನ್.ಎಸ್.ಎಸ್. ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಶಿಸ್ತು-ಸಂಯಮ, ಸಹಬಾಳ್ವೆಯೊಂದಿಗೆ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು,ಜೊತೆಗೆ ದೇಶ ಕಟ್ಟುವ ಕಾರ್ಯದಲ್ಲಿ ಪ್ರವೃತ್ತರಾಗಬೇಕೆಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ಶ್ರೀ ಸಂಜೀವ ಗುಂಡ್ಮಿ ಹೇಳಿದರು.
ಅವರು ಡಾ| ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2020-21ನೇ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ತನ್ನ ಎನ್.ಎಸ್.ಎಸ್. ಅನುಭವವನ್ನು ಹಂಚಿಕೊಂಡರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿದರು. ಎನ್.ಎಸ್.ಎಸ್. ಸಹಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ ವಂದಿಸಿದರು. ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿ ರೋಶನ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಜ್ಯೋತಿ ಅತಿಥಿಗಳನ್ನು ಪರಿಚಯಿಸಿದರು. ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿ ಸುಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.