ಕುಂದಾಪುರ (ಮೇ, 6): ಹಿಂದಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಉಡುಪಿ ಜಿಲ್ಲೆಯ ಸಾಲಿಗ್ರಾಮ ಮೂಲದ ಹಿರಿಯ ಪ್ರಾಧ್ಯಾಪಕ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಜಿ. ಭಾಸ್ಕರ್ ಮಯ್ಯ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 4 ದಿನಗಳಿಂದ ಅವರು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಡಾ.ಜಿ.ಭಾಸ್ಕರ್ ಮಯ್ಯ ಅವರು ಕಮ್ಯುನಿಸ್ಟ್ ಚಿಂತಕರಾಗಿ ದೇಶದ ನಾನಾ ಭಾಗಗಳಲ್ಲಿ ಉಪನ್ಯಾಸ ಕಾರ್ಯಕ್ರಮ ಹಾಗೂ ವಿಚಾರಸಂಕಿರಣಗಳಲ್ಲಿ ಭಾಗವಹಿಸಿರುತ್ತಾರೆ. ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್ ಆಗಿ ಕೆಲಸ ನಿರ್ವಹಿಸಿ ನಿವೃತ್ತಿಯನ್ನು ಪಡೆದಿದ್ದರು. 50ಕ್ಕೂ ಹೆಚ್ಚು ಗ್ರಂಥ ರಚಿಸಿದ್ದ ಭಾಸ್ಕರ್ ಮಯ್ಯ ಅವರ ನಿಧನಕ್ಕೆ ಸಾಹಿತ್ಯ ಲೋಕ ಸಂತಾಪ ಸೂಚಿಸಿದೆ. ಹಿಂದಿ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆಗೈದಿರುವ ಡಾ. ಜಿ. ಭಾಸ್ಕರ್ ಮಯ್ಯ ರವರಿಗೆ ಕೇಂದ್ರ ಸರ್ಕಾರ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು.












