ಕುಂದಾಪುರ(ಅ,7): ವಿಆರ್ಎಲ್ ಸಮೂಹ ಸಂಸ್ಥೆಯ ವಿಜಯವಾಣಿ ಮತ್ತು ದಿಗ್ವಿಜಯ 24X7 ನ್ಯೂಸ್ ಚಾನಲ್ ವತಿಯಿಂದ ಶಿಕ್ಷಣ, ಉದ್ಯಮ, ಆರೋಗ್ಯ, ಪರಿಸರ ಕಾಳಜಿ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಾಡಿನ 42 ಸಾಧಕರಿಗೆ ಕೊಡಮಾಡುವ ‘ವಿಜಯರತ್ನ-2022’ ಪ್ರಶಸ್ತಿಗೆ ಯಶಸ್ವಿ ಉದ್ಯಮಿ, ಸಮಾಜಸೇವಕ ,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಡಾ.ಗೋವಿಂದ ಬಾಬು ಪೂಜಾರಿಯವರು ಭಾಜನರಾದರು.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಸಮಾರಂಭವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಚಿತ್ರನಟ ರಮೇಶ್ ಅರವಿಂದ್, ನಟಿ ಶರ್ಮಿಳಾ ಮಾಂಡ್ರೆ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ವಿಆರ್ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ಆನಂದ ಸಂಕೇಶ್ವರ, ವಿಆರ್ಎಲ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷೆ ವಾಣಿ ಆನಂದ ಆನಂದ ಸಂಕೇಶ್ವರ ಉಪಸ್ಥಿತರಿದ್ದರು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸಾಧನೆಗೈದವರನ್ನು ಗುರುತಿಸಿ ವಿಜಯರತ್ನ ಪ್ರಶಸ್ತಿ ನೀಡಿ ಗೌರವಿಸಿರುವ ಈ ಕಾರ್ಯಕ್ರಮದಲ್ಲಿ ಡಾ.ಗೋವಿಂದ ಬಾಬು ಪೂಜಾರಿಯರನ್ನು ಗುರುತಿಸಿದ್ದು ಶ್ಲಾಘನೀಯ.