ಗಂಗೊಳ್ಳಿ(ಸೆ,25): ಹದಿ ಹರೆಯದಲ್ಲಿ ಕ್ರೀಡೆಯಂತಹ ಚಟುವಟಿಕೆಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ವಿಕಾಸಗೊಳ್ಳಲು ಸಹಾಯವಾಗುತ್ತದೆ. ಇಲ್ಲಿನ ಶಿಸ್ತು ಬದ್ಧತೆ ಎನ್ನುವಂತಾದ್ದು ಉತ್ತಮ ಜೀವನವನ್ನು ರೂಪಿಸಿಕೊಳ್ಳಿವಲ್ಲಿ ಕೂಡ ನೆರವು ನೀಡುತ್ತದೆ ಎಂದು ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಕಾರ್ಯದರ್ಶಿ ಹೆಚ್ ಗಣೇಶ ಕಾಮತ್ ಅಭಿಪ್ರಾಯಪಟ್ಟರು.
ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟಗಳ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ, ಜಿ ಎಸ್ ವಿ ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೆ ನಾರಾಯಣಶೆಟ್ಟಿ ಉಪಸ್ಥಿತರಿದ್ದರು.
ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ನಾಗರಾಜ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಸರಸ್ವತಿ ವಿದ್ಯಾಲಯದ ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ್ಯಕ್ರಮ ನಿರೂಪಿಸಿದರು. ವರದಿ : ನರೇಂದ್ರ ಎಸ್ ಗಂಗೊಳ್ಳಿ