ಕುಂದಾಪುರ (ನ,18): ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವಗುಣ, ಸಮಯಪ್ರಜ್ಞೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಎನ್.ಎಸ್.ಎಸ್. ಉತ್ತಮ ವೇದಿಕೆ. ಈ ವೇದಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಉತ್ತಮ ಉದ್ಯೋಗಗಳನ್ನು ಪಡೆಯುವುದರ ಜೊತೆ ಉತ್ತಮ ಪ್ರಜೆಯಾಗಲು ಸಾಧ್ಯ ಎಂದು ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ| ರಾಧಾಕೃಷ್ಣ ಶೆಟ್ಟಿ ಹೇಳಿದರು.
ಅವರು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಎನ್.ಎಸ್.ಎಸ್. ಸಹ ಯೋಜನಾಧಿಕಾರಿ ದೀಪಾ ಪೂಜಾರಿ ಸ್ವಾಗತಿಸಿದರು. ಎನ್.ಎಸ್.ಎಸ್. ಸ್ವಯಂ ಸೇವಕ ಪ್ರತಿನಿಧಿ ನಿತೇಶ್ ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಸ್ವಯಂ ಸೇವಕಿಯರಾದ ಪ್ರತೀಕ್ಷಾ ಉದ್ಘಾಟಕರನ್ನು ಸಭೆಗೆ ಪರಿಚಯಿಸಿ, ಅನುಷಾ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್. ಸ್ವಯಂ ಸೇವಕರು ಎನ್.ಎಸ್.ಎಸ್. ಗೀತೆ ಹಾಗೂ ರಾಷ್ಟ್ರೀಯ ಭಾವೈಕ್ಯತಾ ಗೀತೆಯನ್ನು ಹಾಡಿದರು.